
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಫೆಬ್ರವರಿ 27 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೌಕರರ ಸಂಘ ತಿಳಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ನೌಕರರ ಸಂಘದ ನಿಯೋಗ ಭೇಟಿ ಮಾಡಿ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದೆ. ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಮಸ್ಯೆಗಳನ್ನು ಪಟ್ಟಿ ಮಾಡಿ ದಾಖಲೆ ಸಹಿತ ಸಲ್ಲಿಸಿದರೆ ಸರ್ಕಾರದ ಗಮನ ಸೆಳೆದು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದರಿಂದ ಮುಷ್ಕರ ಮುಂದೂಡಲಾಗಿದೆ. ಆದರೆ, ಸರ್ಕಾರ ಬೇಡಿಕೆಗಳನ್ನು ಈಡೇರಿಸಲು ವಿಳಂಬ ಮಾಡಿದರೆ ಕಚೇರಿ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಬಿ.ಹೆಚ್. ಶಂಕರೇಗೌಡ ತಿಳಿಸಿದ್ದಾರೆ.