ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ತುಮಕೂರು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಪರೀಕ್ಷೆ ಏಪ್ರಿಲ್ 19 ರಂದು ನಡೆಯಲಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷೆಗೆ ಬಂದು ಹೋಗಲು ಸಮಸ್ಯೆಯಾಗುವ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ.
ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ . ಸಾರಿಗೆ ಸಂಸ್ಥೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮನವಿ ಮೇರೆಗೆ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಶೀಘ್ರವೇ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಅದೇ ರೀತಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಪರೀಕ್ಷೆ ಮುಂದೂಡಿಕೆ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ
ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಭೌತಿಕ ತರಗತಿಗೆ ಹಾಜರಾತಿ ಕಡ್ಡಾಯವಲ್ಲವೆಂದು ಶಿಕ್ಷಣ ಇಲಾಖೆಯಿಂದ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಸಾರಿಗೆ ವ್ಯವಸ್ಥೆ ಸರಿಯಾಗುವವರೆಗೆ ವರ್ಚುಯಲ್ ಅಥವಾ ಪರ್ಯಾಯ ಮಾರ್ಗಗಳ ಮೂಲಕ ಬೋಧನೆ ಮಾಡುವಂತೆ ತಿಳಿಸಲಾಗಿದೆ. ಭೌತಿಕ ತರಗತಿಗಳಿಗೆ ಮಕ್ಕಳ ಹಾಜರಾತಿ ಕಡ್ಡಾಯವಲ್ಲ ಎನ್ನಲಾಗಿದೆ.
ಮೈಸೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿಲ್ಲ. ನಿಗದಿಯಂತೆಯೇ ಬೆಳಗ್ಗೆ 9.30 ರಿಂದ 12.30 ರವರೆಗೆ, ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ನಡೆಯಲಿವೆ ಎಂದು ಹೇಳಲಾಗಿದೆ.