
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಕರೆ ನೀಡಿದೆ.
ವೇದಿಕೆಯ ಅಧ್ಯಕ್ಷ ಚಂದ್ರಶೇಖರ್ ಈ ಕುರಿತು ಮಾಹಿತಿ ನೀಡಿದ್ದು, ಆರನೇ ವೇತನ ಆಯೋಗದ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ನೀಡುವುದಾಗಿ 2021ರ ಏಪ್ರಿಲ್ ನಲ್ಲಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಎರಡು ವರ್ಷ ಕಳೆದರೂ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್ ನಲ್ಲಿಯೂ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಉಲ್ಲೇಖಿಸಿಲ್ಲ. ಹೀಗಾಗಿ ಮುಷ್ಕರ ನಡೆಸಲಾಗುವುದು ಎಂದು ಹೇಳಿದ್ದಾರೆ.
ನೌಕರರ ಸಮಸ್ಯೆಗಳ ಪರಿಹಾರಕ್ಕೆ ವಿವಿಧ ರೀತಿಯ ಹೋರಾಟ ನಡೆಸಿದ್ದರೂ ಸ್ಪಂದಿಸಿಲ್ಲ. ಮಾರ್ಚ್ 1 ರಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ, ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿಲ್ಲ. ಹೀಗಾಗಿ ಮಾರ್ಚ್ 24 ರಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.