ಬೆಂಗಳೂರು: ವೇತನ ಹೆಚ್ಚಳ, ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಡಿಸೆಂಬರ್ 31 ರಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ.
ಡಿಸೆಂಬರ್ 31ರ ರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸುವುದಾಗಿ ಸಾರಿಗೆ ನಿಗಮಗಳ ನೌಕರರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಭಾನುವಾರ ಸಂಜೆ ನಡೆಸಿದ್ದಾರೆ.
ಈ ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಷ್ಕರ ಮುಂದೂಡಲಾಗಿದೆ. ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಮುಂದೂಡಿದ ಬಗ್ಗೆ ಮಾಹಿತಿ ನೀಡಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಲಿಖಿತವಾಗಿ ಮನವಿ ಮಾಡಿ ಮುಷ್ಕರ ಹಿಂಪಡೆಯಬೇಕು ಎಂದು ಕೋರಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸಂಕ್ರಾಂತಿ ನಂತರ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಲಾಗಿದೆ. ಸಿಎಂ ಮತ್ತು ಸಚಿವರ ಸ್ಪಂದನೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಮುಂದೂಡಿದೆ.