ರಾಮನಗರ: ಕುಣಿಗಲ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋದಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಯೋಜನೆ ಮಾಡಲಾಗಿದೆ. ಇದರಿಂದಾಗಿ ಬಸ್ ಗಳಿಲ್ಲದೇ ಪರೀಕ್ಷೆಗೆ ತೆರಳಬೇಕಿರುವ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ತೆರಳಲು ಸೂಕ್ತ ಸಮಯದಲ್ಲಿ ಬಸ್ ಗಳು ಸಿಗದೇ ಹಲವೆಡೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಕಾಂಗ್ರೆಸ್ ಸಮಾವೇಶಕ್ಕೆ ಜನರನ್ನು ಕರೆದೊಯ್ಯಲು ಸರ್ಕಾರ ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ವಿವಿಧ ಭಾಗಗಳಿಂದ 300ಕ್ಕೂ ಹೆಚ್ಚು ಬಸ್ ಗಳನ್ನು ಒಪ್ಪಂದದ ಮೇರೆಗೆ ಪಡೆದಿದೆ. ಪರೀಕ್ಷೆ ಸಮಯದಲ್ಲಿ ಬಸ್ ಗಳಿಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷೆ ಇಂದಿನಿಂದ ಆರಂಭವಾಗುತ್ತಿದೆ ಎಂಬುದರ ಅರಿವಿದ್ದೂ ಅಧಿಕಾರಿಗಳು, ರಾಜಕೀಯ ನಾಯಕರು ಸಮಾವೇಶಕ್ಕೆ ಬಸ್ ನಿಯೋಜಿಸಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.