ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸರ್ಜಾಪುರದ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಅಭಿಜಿತ್ ಶಿಂಧೆ(26) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಡೆವಲಪ್ಮೆಂಟ್ ಸ್ಟಡೀಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಅಭಿಜಿತ್ ಶುಕ್ರವಾರ ವಿವಿಯ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ನೇಹಿತರೊಂದಿಗೆ ಪಾಲ್ಗೊಂಡಿದ್ದರು. ಈ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಅಭಿಜಿತ್ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಸೋಮವಾರ ಮರಣೋತ್ತರ ಪರೀಕ್ಷೆ ವರದಿ ಬರುವ ಸಾಧ್ಯತೆ ಇದ್ದು, ಸಾವಿನ ಕಾರಣ ಗೊತ್ತಾಗಲಿದೆ. ಸರ್ಜಾಪುರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.