ಬೆಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆ(ವಿದ್ಯಾರ್ಥಿವೇತನ)ಯಡಿ ಕಟ್ಟಡ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಮತ್ತು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ ಲೈನ್ ಮೂಲಕ ವೆಬ್‌ಸೈಟ್ http://serviceonline.gov.in/karnataka ಇಲ್ಲಿ ಸಲ್ಲಿಸಲು 2021 ರ ಜುಲೈ 15 ಕೊನೆಯ ದಿನವಾಗಿದೆ.
ವಾರ್ಷಿಕ ಸಹಾಯಧನದ ವಿವರ: ನರ್ಸರಿಯಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿಗಳಿಗೆ 3 ಸಾವಿರ ರೂ.ನಿಂದ 55 ಸಾವಿರ ರೂ.ವರೆಗೆ ಸಹಾಯಧನ ಪಡೆಯಬಹುದಾಗಿದೆ.
ಸಲ್ಲಿಸಬೇಕಾದ ದಾಖಲೆಗಳು:
ಮಂಡಳಿಯಲ್ಲಿ ನೋಂದಣಿಯಾಗಿರುವ ಕುರಿತು ದಾಖಲೆ(ಸ್ಮಾರ್ಟ್ ಕಾರ್ಡ್ ಅಥವಾ ಗುರುತಿನ ಚೀಟಿಯ ದೃಢೀಕೃತ ಪ್ರತಿ), ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ ಮತ್ತು ವ್ಯಾಸಂಗ ಪ್ರಮಾಣ ಪತ್ರವನ್ನು ಸಲ್ಲಿಸುವುದು.
ಅರ್ಹತೆ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಮಗುವಿನ ತಂದೆ ಅಥವಾ ತಾಯಿ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದು, ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ನೋಂದಣಿ ಚಾಲ್ತಿಯಲ್ಲಿರಬೇಕು.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ: 155214(24/7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಇಲಾಖೆ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.