ಬೆಂಗಳೂರು: ಆಸ್ತಿ ನೋಂದಣಿಗೆ ಉತ್ತೇಜನ ನೀಡಲು ಮಾರ್ಗಸೂಚಿ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಸೌಲಭ್ಯ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೊರೋನಾ ಸಂಕಷ್ಟದಿಂದ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆದಾಯ ಸಂಗ್ರಹ ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಆಸ್ತಿ ನೋಂದಣಿಗೆ ಉತ್ತೇಜನ ನೀಡಲು ಶೇಕಡ 10ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿತ್ತು. ಇದರಿಂದಾಗಿ ಜನರಿಗೆ ಅನುಕೂಲವಾಗಿ ಸರ್ಕಾರದ ಆದಾಯ ಹೆಚ್ಚಳವಾಗಿತ್ತು.
ಪ್ರಸಕ್ತ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ದಾಖಲೆ ಮೀರಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಸಂಗ್ರಹವಾಗಿದೆ. ಸೌಲಭ್ಯ ವಿಸ್ತರಣೆಗೆ ಹಣಕಾಸು ಇಲಾಖೆ ತಕರಾರು ಎತ್ತಿದ್ದು, ಸಿಎಂ ಜೊತೆ ಚರ್ಚಿಸಿ ಸೌಲಭ್ಯ ವಿಸ್ತರಣೆಗೆ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಶೌಚಾಲಯ, ವಿಶ್ರಾಂತಿ ಕೊಠಡಿ, ವಾಹನ ಪಾರ್ಕಿಂಗ್ ವ್ಯವಸ್ಥೆ ಸೇರಿ ಮೂಲ ಸೌಕರ್ಯ ಕಡ್ಡಾಯವಾಗಿ ಕಲ್ಪಿಸಬೇಕು. ಸೌಲಭ್ಯ ಇಲ್ಲದ ಕಚೇರಿಗಳನ್ನು ಎಲ್ಲಾ ಮೂಲ ಸೌಕರ್ಯಗಳಿರುವ ಕಟ್ಟಡಗಳಿಗೆ ಸ್ಥಳಾಂತರಿಸಲು ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.