ಬೆಂಗಳೂರು: ಕೊರೋನಾ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ ಸಿಕ್ಕಿದೆ. ಎರಡನೇ ಡೋಸ್ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ.
ರಾಜ್ಯಕ್ಕೆ ಎರಡು ಲಕ್ಷ ಕೋವಿಶೀಲ್ಡ್ ಲಸಿಕೆ ಪೂರೈಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. 18 ರಿಂದ 44 ವರ್ಷ ವಯೋಮಿತಿಯವರಿಗೆ ಉಚಿತವಾಗಿ ಲಸಿಕೆ ನೀಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಇದಕ್ಕಾಗಿ ಎರಡು ಕೋಟಿ ಡೋಸ್ ಕೋವಿಶೀಲ್ಡ್ ಮತ್ತು ಒಂದು ಕೋಟಿ ಡೋಸ್ ಕೊವ್ಯಾಕ್ಸಿನ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಲಸಿಕೆ ಬಗ್ಗೆ ಮಾಹಿತಿ ನೀಡಿರುವ ಭಾರತ್ ಬಯೋಟೆಕ್ ಸಂಸ್ಥೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಎಲ್ಲಾ ಅವರು, ಕರ್ನಾಟಕದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ ದೇಶದ 25 ನಗರಗಳ ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಕೆ ಮಾಡಿರುವುದಾಗಿ ಹೇಳಿದ್ದಾರೆ.