
ಬೆಂಗಳೂರು: ಬೆಂಗಳೂರಿನಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ(27) ಶವ ಪತ್ತೆಯಾಗಿದೆ.
ಜ್ಞಾನಭಾರತಿ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಘಟನೆ ನಡೆದಿದೆ. ಪತಿ ಮಧು ಮತ್ತು ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ಮಗಳನ್ನು ಕೊಲೆ ಮಾಡಲಾಗಿದೆ ಎಂದು ರಂಜಿತಾ ಪೋಷಕರು ಆರೋಪಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ರಂಜಿತಾಗೆ ಐದು ವರ್ಷದ ಹಿಂದೆ ತುಮಕೂರು ಜಿಲ್ಲೆ ತುರುವೇಕೆರೆ ಮೂಲದ ಮಧು ಜೊತೆಗೆ ಮದುವೆಯಾಗಿದ್ದು, ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ಖಾಸಗಿ ಶಾಲೆಯ ಶಿಕ್ಷಕಿಯಾಗಿ ರಂಜಿತಾ ಕಾರ್ಯನಿರ್ವಹಿಸುತ್ತಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಮಧು ಕೆಲಸ ಮಾಡುತ್ತಿದ್ದ.
ಮದುವೆಯಾದಾಗಿನಿಂದಲೂ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ವರದಕ್ಷಿಣೆ ನೀಡಿಲ್ಲ ಎಂದು ಮಗಳನ್ನು ಕೊಲೆ ಮಾಡಿದ್ದಾರೆ ಎಂದು ರಂಜಿತಾ ಪೋಷಕರು ಆರೋಪಿಸಿದ್ದಾರೆ. ಸಾವಿಗೂ ಮುನ್ನ ತಾಯಿಗೆ ಮಗಳು ವಿಡಿಯೋ ಕಾಲ್ ಮಾಡಿದ್ದರು. ಅದಾದ ಬಳಿಕ ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರಿಗೆ ಅಳಿಯ ಮಧು ಕರೆ ಮಾಡಿದ್ದ. ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.