ನವದೆಹಲಿ: ಹಿಮಾಚಲ ಪ್ರದೇಶ ಕಾಂಗ್ರೆಸ್ ಘಟಕದ ಮಾಜಿ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಅವರು ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದ ನಂತರ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಮುಖೇಶ್ ಅಗ್ನಿಹೋತ್ರಿ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಹಿಮಾಚಲದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ನಡೆಯಲಿದೆ.
ಕಾಂಗ್ರೆಸ್ ನಾಯಕರಾದ ಸುಖವಿಂದರ್ ಸಿಂಗ್ ಸುಖು ಸಿಎಂ ಮತ್ತು ಮುಖೇಶ್ ಅಗ್ನಿಹೋತ್ರಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಪ್ರಮಾಣ ವಚನ ಸಮಾರಂಭ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ.
ಈ ಹಿಂದೆ ಹಿಮಾಚಲ ಪ್ರದೇಶ ಘಟಕದ ಮುಖ್ಯಸ್ಥ ಸೇರಿ ಪಕ್ಷದಲ್ಲಿ ಹಲವು ಜವಾಬ್ದಾರಿ ನಿರ್ವಹಿಸಿರುವ ಸುಖವಿಂದರ್ ಸಿಂಗ್ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಹಿಮಾಚಲದಲ್ಲಿ ದಾಖಲೆಯ ಐದನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಸುಖವಿಂದರ್ ಸಿಂಗ್ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಘೋಷಣೆ ಮಾಡುತ್ತಿದ್ದಂತೆ ಪ್ರತಿಭಾ ಸಿಂಗ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಬೆಂಬಲಿಗರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.