ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭಿಸುವ ಚಿಂತನೆ ಇದೆ ಎಂದು ಅವರು ತಿಳಿಸಿದ್ದಾರೆ.
ಇದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ವಿರೋಧ ವ್ಯಕ್ತವಾಗಿದೆ. ಈ ಬಾರಿ ಬೇಸಿಗೆ ರಜೆ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನ ಕೈಗೊಳ್ಳದೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಗೊಂದಲ ಉಂಟಾಗಿದೆ ಎಂದು ಹೇಳಲಾಗುತ್ತಿದೆ.
ಕೊರೋನಾ ಕಾರಣದಿಂದ ಈ ಬಾರಿ ಶಾಲೆಗಳು ವಿಳಂಬವಾಗಿ ಆರಂಭವಾದ ಕಾರಣ ಬೇಸಿಗೆ ರಜೆ ಕಡಿತಗೊಳಿಸಲು ಶಿಕ್ಷಣ ಇಲಾಖೆ ಹಂತದಲ್ಲಿ ಚರ್ಚೆ ನಡೆದಿದೆ. ಆದರೆ, ಲಾಕ್ಡೌನ್ ನಡುವೆಯೂ ಆನ್ಲೈನ್ ತರಗತಿಗಳ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಸಿ ವಿದ್ಯಾರ್ಥಿಗಳ ಪಠ್ಯ ಪೂರ್ಣಗೊಳಿಸಲಾಗಿದೆ. ಬೇಸಿಗೆ ರಜೆ ಕಡಿತ ಮಾಡುವ ನಿರ್ಧಾರವನ್ನು ಸರ್ಕಾರ ಖಾಸಗಿ ಶಾಲೆಗಳ ಮೇಲೆ ಹೇರಬಾರದು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಒತ್ತಾಯಿಸಿವೆ.
ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಬೇಸಿಗೆ ರಜೆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೆ ಗೊಂದಲ ಉಂಟಾಗಿದೆ. ಏಪ್ರಿಲ್ 10 ರೊಳಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪರೀಕ್ಷೆ ಪೂರ್ಣಗೊಳಿಸಲು ತೀರ್ಮಾನಿಸಿದ್ದು, ಸರ್ಕಾರಿ ಶಾಲೆ ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆಗೆ ಬೇಸಿಗೆ ರಜೆ ಕಡಿತಗೊಳಿಸಲು ಮುಂದಾಗಿರುವುದು ಸರಿಯಲ್ಲ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ವಿರೋಧ ವ್ಯಕ್ತವಾಗಿದೆ ಎನ್ನಲಾಗಿದೆ.