ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ತೀವ್ರತೆ ಹೆಚ್ಚಾಗಿದೆ. ಬಹುತೇಕ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಸೇರಿ ನಾನಾ ಸಂಕಷ್ಟಗಳು ಹೆಚ್ಚಾಗುತ್ತಿವೆ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಗಳನ್ನು ಸಜ್ಜುಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ಫೆಬ್ರವರಿ 28ರಂದು ಬುಧವಾರ ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ಕರೆಯಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು. ಮುಂಗಾರು ಪೂರ್ವ ಮಳೆ ಬರದಿದ್ದರೆ ಏಪ್ರಿಲ್, ಮೇನಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತದೆ. ಬರಗಾಲದ ಬೆನ್ನಲ್ಲೇ ರಾಜ್ಯದಲ್ಲಿ ಬೇಸಿಗೆ ತೀವ್ರತೆ ಭಾರಿ ಹೆಚ್ಚಾಗಿದ್ದು, ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ.
ಪರಿಸ್ಥಿತಿ ನಿಭಾಯಿಸಲು ಆಗಬೇಕಾದ ಸಿದ್ಧತೆಗಳ ಪರಿಶೀಲನೆ ಹಿನ್ನೆಲೆಯಲ್ಲಿ ಸಭೆ ನಡೆಸಲಾಗುವುದು. ಇದರೊಂದಿಗೆ ಕಂದಾಯ ಇಲಾಖೆಗೆ ಸಂಬಂಧಿಸಿದ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಸರ್ಕಾರಿ ಭೂಮಿ ರಕ್ಷಣೆಗೆ ಬೀಟ್ ವ್ಯವಸ್ಥೆ, ಕಂದಾಯ ಗ್ರಾಮಗಳ ರಚನೆ, ಭೂ ಸುರಕ್ಷಾ ಯೋಜನೆ ಜಾರಿ, ಬಗರ್ ಹುಕುಂ ಸಾಗುವಳಿ ಸಮಿತಿಗಳ ಪ್ರಗತಿ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.