ಬೆಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಅವಕಾಶವಿದೆ ಎಂದು ಮಾರ್ಚ್ 23 ರೊಳಗೆ ರಾಜ್ಯದ ನಿಲುವನ್ನು ಸುಪ್ರೀಂಕೋರ್ಟ್ಗೆ ತಿಳಿಸಲು ಸರ್ಕಾರ ಮುಂದಾಗಿದೆ.
ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಸಂವಿಧಾನಾತ್ಮಕವಾಗಿ ರಕ್ಷಣೆ ಮಾಡುವ ಕುರಿತು ಪರಾಮರ್ಶೆ ನಡೆಸಿ ಅಂತಿಮವಾಗಿ ಸುಪ್ರೀಂಕೋರ್ಟ್ಗೆ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ.
ಅನಿವಾರ್ಯವಾದ ಸಂದರ್ಭದಲ್ಲಿ ರಾಜ್ಯಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಅಧಿಕಾರವಿದೆ ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇಕಡ 50 ಕ್ಕಿಂತಲೂ ಹೆಚ್ಚು ಮಾಡಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದ್ದು, ಮೀಸಲಾತಿ ಹೆಚ್ಚಳ ಮಾಡುವ ಕುರಿತು ರಾಜ್ಯಗಳ ಅಭಿಪ್ರಾಯ ಕೇಳಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಗೆ ರಾಜ್ಯದ ನಿಲುವು ತಿಳಿಸಲು ಮುಂದಾಗಿದೆ ಎಂದು ಹೇಳಲಾಗಿದೆ.