ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ಸರ್ಕಾರ ಕ್ರಮಕೈಗೊಂಡಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಕಾನೂನು ಕುಣಿಕೆಯಿಂದ ಪಾರಾಗಲು ತೀರ್ಮಾನಿಸಿದೆ.
ಸರ್ವೋಚ್ಚ ನ್ಯಾಯಾಲಯ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ತೀರ್ಪಿನಿಂದ ಸರ್ಕಾರ ಸಂಕಷ್ಟಕ್ಕೆ ಒಳಗಾಗಿದ್ದು, ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿ ಸಮೀಕ್ಷೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು. ಈ ಮೂಲಕ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆಗೆ ಮೊದಲು ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ರಾಜಕೀಯ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಆಗುವುದಿಲ್ಲ. ಈಗಾಗಿ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ವಿವಿಧ ಮಾರ್ಗಗಳನ್ನು ಹುಡುಕಲಾಗುತ್ತಿದೆ ಎಂದು ಹೇಳಿದ್ದಾರೆ.
ಸರ್ಕಾರ ಮೀಸಲಾತಿ ಕಲ್ಪಿಸಲು ಆಯೋಗ ನಡೆಸಿದ ಜಾತಿ ಸಮೀಕ್ಷೆ ವರದಿ ಅಂಕಿ, ಅಂಶಗಳನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ. ಮೀಸಲಾತಿ ನೀಡದಿದ್ದರೆ ಚುನಾವಣೆಯಲ್ಲಿ ಮಾತ್ರವಲ್ಲ, ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗೂ ಸಮಸ್ಯೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಮೀಸಲಾತಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.