ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆ(PMLA) ಪ್ರಕರಣದಲ್ಲಿ ಸಮನ್ಸ್ ನೀಡಿದ ನಂತರ ಹಾಜರಾಗುವ ಆರೋಪಿಯನ್ನು ನ್ಯಾಯಾಲಯದ ಅನುಮತಿ ಪಡೆಯದೆ ಏಕಾಏಕಿ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಈ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರ ಮೇಲಿನ ಅಕ್ರಮ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಪರಮಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಕತ್ತರಿ ಹಾಕಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಪ್ರಕರಣದ ವಿಚಾರಣೆ ಬೆನ್ನಲ್ಲೇ ಆರೋಪಿ ಬಂಧಿಸುವುದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಬಂಧನಕ್ಕೆ ಮುನ್ನ ನ್ಯಾಯಾಲಯದ ಅನುಮತಿ ಕಡ್ಡಾಯವೆಂದು ತಿಳಿಸಿದೆ. ನ್ಯಾಯಾಲಯದ ಸಮನ್ಸ್ ಮೇರೆಗೆ ವಿಚಾರಣೆಗೆ ಹಾಜರಾಗುವ ಆರೋಪಿಯನ್ನು ಜಾರಿ ನಿರ್ದೇಶನಾಲಯ ಕಸ್ಟಡಿಗೆ ಪಡೆಯಲು ಬಯಸುವುದಾದರೆ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಕಸ್ಟಡಿ ವಿಚಾರಣೆ ಅಗತ್ಯವಿದೆ ಎಂಬುದನ್ನು ತನಿಖಾ ಸಂಸ್ಥೆಗಳು ಖಾತರಿಪಡಿಸಿದ ನಂತರವಷ್ಟೇ ಅಧೀನ ನ್ಯಾಯಾಲಯಗಳು ಆರೋಪಿಯನ್ನು ತನಿಖಾಧಿಕಾರಿಗಳ ವಶಕ್ಕೆ ನೀಡಬೇಕು.
ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆ ಸೆಕ್ಷನ್ 19 ಬಳಸಿ ಆರೋಪಿಯನ್ನು ಬಂಧಿಸುವ ಅಧಿಕಾರವನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ, ಉಜ್ಜಲ್ ಭುಯಾನ್ ಅವರಿದ್ದ ನ್ಯಾಯಪೀಠ ಸ್ಪಷ್ಟಪಡಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಡಿಯಿಂದ ತಮ್ಮ ಬಂಧನ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ.