ಮಹಿಳಾ ಉದ್ಯೋಗಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡುವ ಕುರಿತಂತೆ ಕೇಂದ್ರ ಸರ್ಕಾರ ನೀತಿ ರೂಪಿಸಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕು ಎಂದು ನಿರ್ದೇಶನ ನೀಡಿದೆ.
ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಎಂಬವರು, ಮುಟ್ಟಿನ ಅವಧಿಯಲ್ಲಿ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ದೇಶದಾದ್ಯಂತ ತಿಂಗಳ ರಜೆ ನೀಡುವಂತೆ ಆದೇಶಿಸಲು ಕೋರಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಪಾರ್ದಿವಾಲಾ ಹಾಗೂ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ನ್ಯಾಯಾಲಯ ಈ ಕುರಿತು ತೀರ್ಪು ನೀಡಿದರೆ ಅದು ಕೆಲಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಅಲ್ಲದೆ ಉದ್ಯೋಗದಾತರು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲು ಅಥವಾ ಕೆಲಸದಿಂದ ಕೈಬಿಡಲು ಕಾರಣವಾಗಬಹುದು ಎಂದು ತಿಳಿಸಿದೆ.
ಹೀಗಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ ನೀತಿ ರೂಪಿಸಬೇಕಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿಗಳು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.