ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದರಿಂದ ಸೂರಜ್ ರೇವಣ್ಣ ಜೈಲು ಪಾಲಾಗಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಅವರನ್ನು ಇಂದು ಬೆಳಗ್ಗೆ ಬಂಧಿಸಲಾಗಿತ್ತು. ಹಾಸನದಿಂದ ಅವರನ್ನು ಬೆಂಗಳೂರಿನ ಕೋರ್ಟ್ ಗೆ ಕರೆತರಲಾಗಿದ್ದು, ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಎದುರು ಹಾಜರುಪಡಿಸಲಾಗಿತ್ತು, ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೆಡಿಎಸ್ ಕಾರ್ಯಕರ್ತನಾಗಿರುವ ಯುವಕನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಸೂರಜ್ ರೇವಣ್ಣ ವಿರುದ್ಧ 377, 342, 506ರಡಿ ಕೇಸ್ ದಾಖಲಾಗಿದೆ. ಜಾಮೀನು ರಹಿತ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು ಇಂದು ಬೆಳಿಗ್ಗೆ ಅವರನ್ನು ಬಂಧಿಸಿದ್ದರು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದು, ಈಗ ಸೂರಜ್ ರೇವಣ್ಣನೂ ಜೈಲು ಸೇರುವಂತಾಗಿದೆ. ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ.