ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಜುಲೈ 1ಕ್ಕೆ ಅಂತ್ಯವಾಗಲಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಜೂನ್ 22ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಜೂನ್ 23ರಂದು ಸಿಐಡಿ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಸೂರಜ್ ರೇವಣ್ಣನನ್ನು ಹಾಜರುಪಡಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ.
ನಂತರ ಮತ್ತೊಬ್ಬ ಸಂತ್ರಸ್ತ ಯುವಕ ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದು, ಆ ಪ್ರಕರಣವನ್ನು ಕೂಡ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಇಂದು ಸೂರಜ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ಕೇಳಲಾಗುವುದು ಎನ್ನಲಾಗಿದೆ.