ಹಾಸನ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ತಮ್ಮ ವಿರುದ್ಧ ಕೇಳಿ ಬಂದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗನ್ನಿಕಡ ಫಾರ್ಮ್ ಹೌಸ್ ನಲ್ಲಿ ಸೂರಜ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಷಡ್ಯಂತ್ರ ಎಷ್ಟು ದಿನದಿಂದ ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ನನ್ನ ವಿರುದ್ಧ ಮಾಡಿರುವ ಆರೋಪವನ್ನು ಖಡಾಖಂಡಿತವಾಗಿ ತಿರಸ್ಕರಿಸುತ್ತೇನೆ. ಕಾನೂನು ವ್ಯವಸ್ಥೆಯಲ್ಲಿ ಏನು ತೀರ್ಮಾನ ಆಗಬೇಕು ಅದೆಲ್ಲವೂ ಆಗುತ್ತದೆ. ನನ್ನ ವಿರುದ್ಧ ಸಂಪೂರ್ಣ ರಾಜಕೀಯ ಷಡ್ಯಂತ್ರ ನಡೆದಿದೆ ಎಂದು ಹೇಳಿದ್ದಾರೆ.
ಠಾಣೆಗೆ ನನ್ನ ವಿರುದ್ಧ ದೂರು ನೀಡಿರುವ ಯುವಕನ ವಿರುದ್ಧವೂ ಕೇಸ್ ದಾಖಲಿಸಲಾಗಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಎಲ್ಲವೂ ಹೊರಗೆ ಬರುತ್ತದೆ. ಇಂಥವರು, ಅಂಥವರು. ಅವರು ಇವರು ಎಂದು ನಾನು ಈ ಬಗ್ಗೆ ಚರ್ಚೆ ಮಾಡುವುದಿಲ್ಲ. ತನಿಖೆ ಬಳಿಕ ಸತ್ಯ ಹೊರಗೆ ಬರುತ್ತದೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.