ನವದೆಹಲಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.
ಇದೇ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗ 13 ರಾಜ್ಯಗಳ 26 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ವಿಧಾನಸಭೆ ಉಪ ಚುನಾವಣೆ ನಡೆಸಲಾಗುವುದು.
ಬಿಹಾರ, ಹರಿಯಾಣ, ಕರ್ನಾಟಕ, ಗುಜರಾತ್, ಜಾರ್ಖಂಡ್, ಮಹಾರಾಷ್ಟ್ರ, ತೆಲಂಗಾಣ, ಉತ್ತರ ಪ್ರದೇಶ, ತ್ರಿಪುರ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ತಮಿಳುನಾಡು, ರಾಜಸ್ಥಾನದಲ್ಲಿ ತೆರವಾದ ವಿಧಾನಸಭಾ ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಉಪಚುನಾವಣೆ ನಡೆಸಲಾಗುವುದು.
ಕರ್ನಾಟಕದ ಸುರಪುರ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಮೇ 7ರಂದು ದೇಶದಲ್ಲಿ 3ನೇ ಹಂತದ, ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ.
ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾದ ಹಿನ್ನೆಲೆಯಲ್ಲಿ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದೆ.