ಬೆಂಗಳೂರು: ರಾಜ್ಯದಲ್ಲಿ 11 ತಿಂಗಳ ನಂತರ ಸೋಮವಾರದಿಂದ 6, 7, 8 ನೇ ತರಗತಿಗಳು ಆರಂಭವಾಗಿ ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ.
ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಸರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ನಿಯಮ ಸಡಿಲಿಕೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿಗೆ ಸೀಮಿತಗೊಳಿಸಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್.ಟಿ.ಇ. ಶುಲ್ಕ ಮರುಪಾವತಿಗೆ ಸಂಬಂಧಿಸಿದ ನಿಯಮಗಳಲ್ಲಿ ವಿನಾಯಿತಿ ನೀಡಲು ಸಚಿವರು ಸೂಚನೆ ನೀಡಿದ್ದಾರೆ.
ಶಾಲೆಗಳು ತಡವಾಗಿ ಆರಂಭವಾಗಿವೆ. ಮಕ್ಕಳ ಶಾಲಾ ಹಾಜರಾತಿಯನ್ನು ಪೋಷಕರು ಮತ್ತು ವಿದ್ಯಾರ್ಥಿಗಳ ವಿವೇಚನೆಗೆ ಬಿಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಹಾಜರಾತಿ ಕಡ್ಡಾಯ ಅಲ್ಲ ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.
ಹೀಗಾಗಿ ಖಾಸಗಿ ಅನುದಾನ ರಹಿತ ಶಾಲೆಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಖಾಸಗಿ ಶಾಲೆಗಳಿಗೆ ಆರ್ಟಿಇ ಶುಲ್ಕ ಮತ್ತು ಎಸೆಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಹಾಜರಾತಿಗೆ ಇದ್ದ ಹಾಜರಾತಿ ಮತ್ತು ದಾಖಲಾತಿ ಕುರಿತಾದ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.