ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಲಾಗುವುದು. ಇದರೊಂದಿಗೆ 10 ಸಾವಿರ ಶಿಕ್ಷಕರ ನೇಮಕಾತಿಗೆ 2021 – 22 ನೇ ಸಾಲಿನ ಬಜೆಟ್ನಲ್ಲಿ ಅವಕಾಶ ನೀಡಲು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಶಾಲಾ ಕಟ್ಟಡಗಳ ನಿರ್ವಹಣೆಗೆ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗಾಗಿ ನೀತಿ ನಿರೂಪಣೆಗೆ ಶಿಕ್ಷಣ ಆಯೋಗ ಸ್ಥಾಪಿಸುವಂತೆ ಕೋರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.