ಬೆಂಗಳೂರು: ರಾಜ್ಯ ಸರ್ಕಾರ ಆರಂಭಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿದ್ದು, ರಾಜ್ಯಾದ್ಯಂತ ಹೆಚ್ಚಿನ ಶಾಲೆಗಳನ್ನು ಆರಂಭಿಸುವಂತೆ ಸಾರ್ವಜನಿಕ ವಲಯದಲ್ಲಿ ಮನವಿಗಳು ಬರುತ್ತಿರುವುದರಿಂದ ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ ಒಂದು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವ ಚಿಂತನೆಯಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಅವರು ಭೇಟಿ ನೀಡಿ, ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲು ಶಾಲೆಗಳು ಕೈಗೊಂಡಿರುವ ಸಿದ್ಧತೆ ಕುರಿತು ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
ಖಾಸಗಿ ಶಾಲೆಗಳಿಗಿಂತಲೂ ಉತ್ತಮ ಶಿಕ್ಷಣ ಮತ್ತು ಹೆಚ್ಚಿನ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿರುವ ಹಿನ್ನೆಲೆ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಉತ್ಸುಕರಾಗಿದ್ದಾರೆ ಎಂದರು.