alex Certify BIG NEWS: ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ; ಸುರೇಶ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ; ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಪಿಯುಸಿ ಫಲಿತಾಂಶ ಪ್ರಕಟಿಸಿ ಮಾತನಾಡಿದ ಅವರು, ಪದವಿ ಕಾಲೇಜುಗಳಿಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಬಾರಿಯ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಪಿಯುಸಿ ಉತ್ತೀರ್ಣರಾಗುವ ಹಿನ್ನೆಲೆಯಲ್ಲಿ ಅವರೆಲ್ಲರಿಗೂ ಪದವಿ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲು ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳಿಗೆ ಅವಕಾಶ ಕಲ್ಪಿಸಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಅವರೂ ಸಹ ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ವೈಜ್ಞಾನಿಕ ಆಧಾರದಲ್ಲಿ ಫಲಿತಾಂಶ ಘೋಷಣೆ:

ಈಗ ಪಾಸಾಗುತ್ತಿರುವ ಎಲ್ಲ ಮಕ್ಕಳು ಕಳೆದ ವರ್ಷ ಮೊದಲ ಪಿಯುಸಿ ತರಗತಿಗಳನ್ನು ಪರೀಕ್ಷೆಯ ಮೂಲಕ ಉತ್ತೀರ್ಣರಾಗಿದ್ದು, ಆ ಅಂಕಗಳು ಮತ್ತು ಅವರ 10ನೇ ತರಗತಿ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ಫಲಿತಾಂಶಗಳನ್ನು ಘೋಷಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

2019-20ನೇ ಸಾಲಿನಲ್ಲಿ ನಡೆದ ಮೊದಲ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಅವರ ಎಸ್ಸೆಸ್ಸೆಲ್ಸಿ ಅಂಕಗಳ ಆಧಾರದ ಮೇಲೆ ಈ ಬಾರಿಯ ದ್ವಿತೀಯ ಪಿಯುಸಿ ಅಂಕಗಳನ್ನು ನಿರ್ಧರಿಸಲಾಯಿತು. ಆ ಕುರಿತು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತಿದೆ. ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ಎಸ್ಎಲ್ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಕುರಿತಂತೆ ಅಧಿಕೃತ ಸರ್ಕಾರದ ಆದೇಶ ಪ್ರಕಟಣೆ ಮೂಲಕ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದೂ ಹೇಳಿದರು.

ಎಸ್ಸೆಸ್ಸೆಲ್ಸಿ ಅಥವಾ ಇತರೆ ಮಂಡಳಿಗಳ 10ನೇ ತರಗತಿಯಲ್ಲಿ ಪಡೆದ ವಿಷಯವಾರು ಅಂಕಗಳಲ್ಲಿ ಶೇ. 45ರಷ್ಟು ಅಂಕಗಳು, ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಶೇ. 45ರಷ್ಟು ಅಂಕಗಳು, ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಚುಟುವಟಿಕೆಗಳಿಗೆ ಶೇ. 10 ರಷ್ಟು ಅಂಕಗಳು ಮತ್ತು ಪ್ರಥಮ ಪಿಯುಸಿ ಪಡೆದ ಅಂಕಗಳಿಗೆ ಶೇ. 5 ಅಂಕಗಳನ್ನು ಸಿದ್ಧಪಡಿಸಿ ಫಲಿತಾಂಶವನ್ನು ನಿರ್ಣಯಿಸಲಾಗಿದೆ ಎಂದು ಫಲಿತಾಂಶ ಘೋಷಣೆಯ ವಿವರಗಳನ್ನು ನೀಡಿದರು.

ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳೂ ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ಅವರು ಹೇಳಿದರು.

ನಾವು ಘೋಷಿಸಿದಂತೆ ನಿಗದಿತ ಅವಧಿಯಲ್ಲೇ ಫಲಿತಾಂಶ ಪ್ರಕಟಿಸಿದ್ದೇವೆ. ಸಿಬಿಎಸ್‍ಇನವರಿಗಿಂತ ಫಲಿತಾಂಶ ಘೋಷಿಸಬೇಕೆಂಬುದು ನಮ್ಮ ಮಕ್ಕಳ ಇಚ್ಛೆಯಾಗಿತ್ತು ಎಂದು ಸಚಿವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...