ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆತಂಕದ ನಡುವೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಚರ್ಚೆಗಳು ನಡೆದಿವೆ.
ಜುಲೈ 1 ರಿಂದ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎಂಬುದರ ಬಗ್ಗೆ ಜೂನ್ 28 ರೊಳಗೆ ನಿರ್ಧಾರ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ವಿದ್ಯಾಗಮ ಯೋಜನೆಯ ಕುರಿತಂತೆ ಸಂಘ-ಸಂಸ್ಥೆಗಳೊಂದಿಗೆ ಸಭೆ ನಡೆಸಿದ ಸಚಿವರು ಶಾಲೆ ಆರಂಭಿಸುವುದಕ್ಕಿಂತ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವುದು ನಮ್ಮ ಉದ್ದೇಶವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಶಾಲೆ ಆರಂಭಿಸುವ ಕುರಿತಂತೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಎಲ್ಲರ ಸಲಹೆ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ. ಆರೋಗ್ಯ ಇಲಾಖೆ ಸಲಹೆ ಪಡೆದು ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 1 ರಿಂದ ಶಾಲೆ ಆರಂಭಿಸಬೇಕೆ? ಬೇಡವೇ? ಎನ್ನುವುದರ ಕುರಿತಂತೆ ಸೋಮವಾರದೊಳಗೆ ತೀರ್ಮಾನಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.