
ಮೈಸೂರು: ಅತ್ತ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳ ನಡೆಯುತ್ತಿದ್ದು ದೇಶ ವಿದೇಶಗಳಿಂದ ಲಕ್ಷಾಂತರ ಭಕ್ತರು ಮಹಾಕುಂಭಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಇತ್ತ ಕರ್ನಾಟಕದಲ್ಲಿಯೂ ಕುಂಭಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಕುಂಭಮೇಳ ಆರಂಭವಾಗಲಿದೆ.
ಮೂರು ವರ್ಷಗಳಿಗೆ ಒಮ್ಮೆ ನಡೆಯುವ ಕರ್ನಾಟಕದ ಕುಂಭಮೇಳ ಫೆ.10ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಟಿ.ನರಸಿಪುರದ ತಿರುಮಕೂಡಲಿಯಲ್ಲಿನ ತ್ರಿವೇಣಿ ಸಂಗಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ ಕುಂಭಮೆಳಕ್ಕೆ ಚಾಲನೆ ನೀಡಲಿದ್ದಾರೆ. ಆದಿ ಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀಗಳು ಸೇರಿದಂತೆ ಹಲವು ಸ್ವಾಮೀಜಿಗಳು ಸಾನ್ನಿಧ್ಯ ವಹಿಸಲಿದ್ದಾರೆ.
ಕಾವೇರಿ, ಕಪಿಲಾ ಹಾಗೂ ಸ್ಫಟಿಕ ನದಿಗಳ ಸಂಗಮ ಕ್ಷೇತ್ರವಾದ ತಿರುಮಕೂಡಲಿಯಲ್ಲಿ ಆಧ್ಯಾತ್ಮಿಕ ಹಬ್ಬ ಕುಂಭಮೇಳ ನಡೆಯಲಿದ್ದು, ಮಾಘಮಾಸದ ಪುಣ್ಯ ಸ್ನಾನಕ್ಕಾಗಿ ಲಕ್ಷಾಂತರ ಭಕ್ತರು ಕಾದಿದ್ದಾರೆ. ರಾಜ್ಯ, ಹೊರ ರಾಜ್ಯಗಳಿಂದಲೂ ಪವಿತ್ರ ಸ್ನಾನಕ್ಕಾಗಿ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.