ಮುಂಬೈ: ಮುಂಬೈ ಪೂರ್ವ ಉಪನಗರದಲ್ಲಿರುವ ತನ್ನ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪೊಲೀಸರ ಪ್ರಕಾರ, ಉತ್ತರ ಪ್ರದೇಶದ ಮಹಾರಾಜ್ ಗಂಜ್ ಮೂಲದ ಆರೋಪಿ, ಬಾಲಕಿಯ ಸಂಬಂಧಿ ನಡೆಸುತ್ತಿದ್ದ ಶಾಪ್ ನಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದ. ಬಾಲಕಿಯ ಕುಟುಂಬವು ಶಾಪ್ ಬಳಿ ವಾಸಿಸುತ್ತಿದ್ದರಿಂದ, ಆರೋಪಿ ಆಕೆಯ ಕುಟುಂಬದೊಂದಿಗೆ ಪರಿಚಯವಾಗಿದ್ದ ಎಂದು ತನಿಖಾಧಿಕಾರಿಯೊಬ್ಬರು ಹೇಳಿದರು.
ಆರೋಪಿಯು ಸೆಪ್ಟೆಂಬರ್ ಮಧ್ಯಭಾಗದಲ್ಲಿ 15 ವರ್ಷದ ಬಾಲಕಿಯ ಮನೆಗೆ ಹೋಗಿದ್ದ. ಆಕೆಯ ಪೋಷಕರು ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಆರೋಪಿಯು ಮನೆಯೊಳಗೆ ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸದ್ದಾನೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಕೆಲಸ ಬಿಟ್ಟು ಮೊಬೈಲ್ ನಂಬರ್ ಬದಲಾಯಿಸಿ ಬೇರೆ ಅಂಗಡಿಯಲ್ಲಿ ಕೆಲಸ ಆರಂಭಿಸಿದ್ದ. ಡಿಸೆಂಬರ್ ಮೊದಲ ವಾರದಲ್ಲಿ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡು ಪೋಷಕರಿಗೆ ಹೇಳಿದ್ದಾಳೆ. ಆಕೆಯ ತಾಯಿ ಅವಳನ್ನು ವೈದ್ಯರ ಬಳಿಗೆ ಕರೆದೊಯ್ದ ಸಂದರ್ಭದಲ್ಲಿ ಗರ್ಭಿಣಿ ಎಂದು ವೈದ್ಯರು ಬಹಿರಂಗಪಡಿಸಿದ್ದಾರೆ.
ನಂತರ ಕುಟುಂಬವು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರನ್ನು ಸಂಪರ್ಕಿಸಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.