ತಮಿಳುನಾಡಿನ ಜನತೆ ಶ್ರದ್ಧಾ ಭಕ್ತಿಯಿಂದ ಆಚರಿಸುವ ತೈಪೂಸಂ ಹಿನ್ನಲೆಯಲ್ಲಿ ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿಯಲ್ಲಿ ವ್ಯಕ್ತಿಯೊಬ್ಬರು ಬಡ ಮಹಿಳೆಯರಿಗೆ ಉಚಿತವಾಗಿ ಸೀರೆ ಮತ್ತು ಪುರುಷರಿಗೆ ಪಂಚೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.
ಶನಿವಾರದಂದು ಈ ಘಟನೆ ಸಂಭವಿಸಿದ್ದು, ಉಚಿತ ಸೀರೆ ಮತ್ತು ಪಂಚೆ ವಿತರಿಸುವ ಸಲುವಾಗಿ ಟೋಕನ್ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಸ್ಥಳದಲ್ಲಿ ಪೊಲೀಸರು ಸಹ ಬಂದೋಬಸ್ತಿಗಾಗಿ ಬೀಡು ಬಿಟ್ಟಿದ್ದರು. ಆದರೆ ನಿರೀಕ್ಷೆಗೂ ಮೀರಿದ ಜನ ಆಗಮಿಸಿದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.
ಅಪಾರ ಜನಜಂಗುಳಿಯಿಂದ ಉಂಟಾದ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿದ್ದು, ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಮಾಹಿತಿ ಪಡೆದುಕೊಂಡಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಮಗ್ರ ತನಿಖೆ ನಡೆಸುವಂತೆ ತಿರುಪತ್ತೂರು ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.