ಬೆಳಗಾವಿ : ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಪೋರ್ಸ್ ರಚಿಸುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ತಕ್ಷಣ ಮಕ್ಕಳ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲೆ ಕುರಿತು ಜಾಗೃತಿ ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಪ್ರಚಾರ ಕೈಗೊಳ್ಳಿ. ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ಪದ್ಧತಿಮಕ್ಕಳ ಭವಿಷ್ಯಕ್ಕೆ ಹಾನಿಕಾರಕ. ಇದರ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು ಎಂದು ಸೂಚನೆ ನೀಡಿದರು.
ಕಾರ್ಮಿಕ ಭವನ ನಿರ್ಮಾಣ ಈಗಾಗಲೇ ಜಿಲ್ಲೆಯಲ್ಲಿದೆ. ಸ್ಥಳೀಯ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಾ ಮಟ್ಟದಲ್ಲಿ ಕೂಡ ಕಾರ್ಮಿಕ ಭವನ, ಕಾರ್ಮಿಕ ಇಲಾಖೆ ಕಚೇರಿಗಳು ಇರಲೇಬೇಕು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.