ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭಿಣಿ ಶಿಕ್ಷಕಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪವಿತ್ರಾ(30) ಮೃತಪಟ್ಟ ಶಿಕ್ಷಕಿ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮೂಲದ ಪವಿತ್ರಾ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಸಮೀಪದ ಬಾಂಡ್ರಾವಿ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಆರು ತಿಂಗಳ ಗರ್ಭಿಣಿಯಾಗಿದ್ದ ಅವರು ಮೂರು ದಿನಗಳ ಹಿಂದೆ ರಾಂಪುರದ ಲೋಟಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಪಾಸಣೆಗೆ ಹೋಗಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಮಗುವಿನ ಹೃದಯ ಬಡಿತ ನಿಂತಿದೆ ಎಂದು ತಿಳಿಸಿ ಸ್ಕ್ಯಾನಿಂಗ್ ಮಾಡಿಸಲು ಹೇಳಿದ್ದಾರೆ. ಬಳ್ಳಾರಿಯ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಂಡು ಬಂದ ಪವಿತ್ರಾ ವರದಿ ನೀಡಿದ್ದಾರೆ. ರಾತ್ರಿ 7 ಗಂಟೆಗೆ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರೂ, ಮಧ್ಯರಾತ್ರಿ 12 ಗಂಟೆ ನಂತರ ಶಸ್ತ್ರ ಚಿಕಿತ್ಸೆ ಆರಂಭಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪವಿತ್ರಾ ಅವರ ಪತಿ ದೂರು ನೀಡಿದ್ದಾರೆ.