ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇನ್ನೂ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಇನ್ನೂ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸುವಂತೆ ಮನವಿ ಸಲ್ಲಿಸಲಾಗಿದೆ.
ಸಂಘದ ಅಧ್ಯಕ್ಷ ಕೆ. ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಆರ್ಥಿಕ ಇಲಾಖೆಗೆ ಈ ಕುರಿತು ಮನವಿ ಮಾಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ 27,000 ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರು ಮತ್ತು 8000 ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಮಂಜೂರಾತಿ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಇಲಾಖೆಯಲ್ಲಿ ಇನ್ನೂ ಹೆಚ್ಚಿನ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಪ್ರಸ್ತುತ ನೀಡಲಾದ ಮಂಜೂರಾತಿ ಸಾಕಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಅತಿಥಿ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಅವಶ್ಯಕತೆ ಇದ್ದು, ಕನಿಷ್ಠ 10 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಬೇಕೆಂದು ಮನವಿ ಮಾಡಿದ್ದಾರೆ.