ಶಿವಮೊಗ್ಗ: ರಾಜ್ಯದ ಕೆಲವು ಕಡೆ ಶಿಕ್ಷಕರು ಪಾಠ ಮಾಡದೆ ಖಾಸಗಿ ವ್ಯವಹಾರ, ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು, ರಾಜ್ಯದ ಕೆಲವು ಕಡೆ ಶಿಕ್ಷಕರ ಕಾರ್ಯವೈಖರಿ ಕುರಿತಾಗಿ ದೂರುಗಳು ಕೇಳಿ ಬಂದಿವೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲುಸ್ತುವಾರಿ ನೋಡಿಕೊಳ್ಳುವ ಬಿ.ಆರ್.ಸಿ. ಮತ್ತು ಸಿ.ಆರ್.ಪಿ.ಗಳ ಕಾರ್ಯನಿರ್ವಹಣೆ ಕೂಡ ತೃಪ್ತಿಕರವಾಗಿಲ್ಲವೆಂಬ ದೂರು ಬಂದಿದೆ ಎಂದು ತಿಳಿಸಿದ್ದಾರೆ.
ಕೆಲವು ಶಿಕ್ಷಕರು ರಿಯಲ್ ಎಸ್ಟೇಟ್, ಖಾಸಗಿ ವ್ಯವಹಾರ ಮಾಡಿಕೊಂಡಿದ್ದಾರೆ. ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಾಠ ಮಾಡದ ಶಿಕ್ಷಕರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ತೊಂದರೆಯಾಗದಂತೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಶಿಕ್ಷಕರ ಕೊರತೆ ಇರುವ ಕಡೆ ತಾತ್ಕಾಲಿಕವಾಗಿ ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದ ಅವರು, ಶಾಲೆಗಳಿಗೆ ದುರಸ್ತಿ, ಕುಡಿಯುವ ನೀರು, ಶೌಚಾಲಯ ಮೊದಲಾದ ಮೂಲಸೌಕರ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.