ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ. ಪೋಷಕರು ಮತ್ತು ಹಿಂದೂ ಪರ ಸಂಘಟನೆಗಳ ಪ್ರತಿಭಟನೆಗೆ ಮಣಿದ ಶಾಲಾ ಆಡಳಿತ ಮಂಡಳಿ ಶಿಕ್ಷಕಿ ವಜಾಗೊಳಿಸುವ ನಿರ್ಧಾರ ಕೈಗೊಂಡಿದೆ.
ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶಾಲೆಯಿಂದ ವಜಾಗೊಂಡವರು. ಕೆಲವು ದಿನಗಳ ಹಿಂದೆ ಅವರು ಅಯೋಧ್ಯೆ ಶ್ರೀರಾಮಮಂದಿರ ಮತ್ತು ಶ್ರೀರಾಮ ದೇವರ ಕುರಿತಾಗಿ ಅವಹೇಳನ ಮಾಡಿರುವುದಾಗಿ ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದ್ದರು. ಇದು ವಿವಾದದ ಸ್ವರೂಪ ಪಡೆದುಕೊಂಡು ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.
ಸೋಮವಾರ ಬೆಳಗ್ಗೆ ಶಾಲೆಯ ಗೇಟ್ ಹೊರಗೆ ಪ್ರತಿಭಟನೆ ನಡೆಸಿ ಶಿಕ್ಷಕಿಯನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದರು. ಶಾಸಕ ವೇದವ್ಯಾಸ್ ಕಾಮತ್ ಕೂಡ ಶಾಲಾ ಆಡಳಿತ ಮಂಡಳಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು, ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಾಡಿದ ಆಡಳಿತ ಮಂಡಳಿ ಶಿಕ್ಷಕಿಯನ್ನು ವಜಾಗೊಳಿಸಿದೆ.