ಬೆಂಗಳೂರು: ರಾಜ್ಯದಲ್ಲಿ 15000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆರರಿಂದ ಎಂಟನೇ ತರಗತಿ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 47 ವರ್ಷ, ಪ್ರವರ್ಗ 2 ಎ, 2 ಬಿ, 3 ಎ ಮತ್ತು 3 ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 45 ವರ್ಷ, ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 42 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರತಿ ಪ್ರವರ್ಗಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು, ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಶೇಕಡ 1 ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ.