ಬೆಂಗಳೂರು: ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ರಾಜ್ಯ ಬಿಜೆಪಿ ಸರ್ಕಾರ ದೂರದೃಷ್ಟಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, 9 ತಿಂಗಳ ಒಳಗೆ 15,000 ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಮಾಹಿತಿ ನೀಡಿದರು.
ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವರು, ನೇಮಕ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.
15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಬರೆದು, 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,363 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಹಿಂದಿನ ನೇಮಕಾತಿಗಳಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಆಯ್ಕೆಯಾಗಿದ್ದಾರೆ. ಇದರಿಂದ ಖಾಯಂ ಶಿಕ್ಷಕರ ಕೊರತೆ ನೀಗಲಿದೆ ಎಂದು ತಿಳಿಸಿದರು.
ಹಿಂದಿನ ಎರಡು ಅವಧಿಯಲ್ಲಿ ನಡೆದ ನೇಮಕ ಪರೀಕ್ಷೆಯಲ್ಲಿ ಕ್ರಮವಾಗಿ 3,389 ಹಾಗೂ 1,994 ಶಿಕ್ಷಕರ ಹುದ್ದೆಗಳು ಭರ್ತಿಯಾಗಿದ್ದವು. ಈ ಬಾರಿ ಬಿ.ಎಸ್ಸಿಯಲ್ಲಿ ಹೊಸ ಕಾಂಬಿನೇಷನ್, ಎಂಜಿನಿಯರಿಂಗ್ ಪದವೀಧರರಿಗೆ ಅವಕಾಶ ನೀಡಲಾಗಿತ್ತು. ವಯೋಮಿತಿ ಸಡಿಲಿಕೆ ಸೇರಿದಂತೆ ನೇಮಕ ನಿಯಮಗಳಲ್ಲಿ ಸಾಕಷ್ಚು ಸುಧಾರಣೆ ಕ್ರಮಗಳನ್ನು ಅನುಸರಿಸಿದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ನೇಮಕ ಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿತ್ತು. ಅದರಲ್ಲಿ 4,187 ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದಾರೆ. ಮುಂದಿನ ಬಾರಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಈ ಖಾಲಿ ಹುದ್ದೆಗಳು ಭರ್ತಿಯಾಗುವ ವಿಶ್ವಾಸವಿದೆ ಎಂದು ಸಚಿವ ನಾಗೇಶ್ ತಿಳಿಸಿದರು.
ಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಹಾಗೂ 19 ಎಂಜಿನಿಯರಿಂಗ್ ಪದವೀಧರರು ಆಯ್ಕೆಯಾಗಿದ್ದಾರೆ. ಜೀವವಿಜ್ಞಾನ, ಗಣಿತ ಮತ್ತು ಇಂಗ್ಲೀಷ್ ಶಿಕ್ಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಸಚಿವರು ತಿಳಿಸಿದರು.
ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಸುವ ಗುರಿ ಹೊಂದಲಾಗಿದೆ. ಪ್ರತಿ ವರ್ಷ ನಿವೃತ್ತರಾಗುವ ಸಂಖ್ಯೆಯಷ್ಟು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅನುಮತಿ ಕೋರಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಾದ ಆರ್.ವಿಶಾಲ್, ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ನಿರ್ದೇಶಕರಾದ ಕಾವೇರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.