ಕಲಬುರಗಿ: ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶುಕ್ರವಾರ ಇಲ್ಲಿನ ಕೆ.ಕೆ.ಆರ್.ಟಿ.ಬಿ. ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಿ 14 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಂಡಿದ್ದು, ಇದರಲ್ಲಿ 12 ಸಾವಿರ ಜನರು ಈಗಾಗಲೆ ಶಾಲೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.
800-900 ಜನ ವಿವಿಧ ಕಾರಣದಿಂದ ಕೋರ್ಟ್ ಮೊರೆ ಹೋಗಿದ್ದು, ಆ ಸಮಸ್ಯೆ ಸಹ ಶೀಘ್ರ ಬಗೆಹರಿಯಲಿದೆ. 12 ಸಾವಿರ ಪೈಕಿ 3,900 ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನಿಯೋಜಿಸಲಾಗಿದೆ. 43 ಸಾವಿರ ಅತಿಥಿ ಶಿಕ್ಷಕರನ್ನು ಸಹ ಪಡೆದುಕೊಂಡಿದ್ದೇವೆ. ಕ.ಕ. ಭಾಗದಲ್ಲಿ ಕೆ.ಕೆಆರ್.ಡಿ.ಬಿ. ಮಂಡಳಿ 2,618 ಅತಿಥಿ ಶಿಕ್ಷಕರ ನೇಮಕ ಮಾಡಿಕೊಂಡಿದ್ದು ಸ್ವಾಗತಾರ್ಹ ಎಂದರು.
ಆಗಾಗ ನಿವೃತ್ತ ಕಾರಣ ಶಿಕ್ಷಕರ ಕೊರತೆ ಹೆಚ್ಚಿರುವುದರಿಂದ, ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆದಿದೆ. ಒಟ್ಟಾರೆಯಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಸಮಾನತೆ ಕಲ್ಪಿಸಲು ಆದ್ಯತೆ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ
ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ. ಪ್ರಸ್ತುತ ರಾಜ್ಯದಲ್ಲಿ 297 ಕೆ.ಪಿ.ಎಸ್. ಶಾಲೆ ಇದ್ದು, ಇದರ ಜೊತೆಗೆ ಈ ವರ್ಷ 500 ಶಾಲೆ ಆರಂಭಿಸಲಾಗುವುದು ಎಂದರು.
ದ್ವಿಭಾಷಾ ಬೋಧನೆ, ವಿಷಯ ಶಿಕ್ಷಕರ ಜೊತೆಗೆ ದೈಹಿಕ, ಸಂಗೀತ ಶಿಕ್ಷಕರು, ಉತ್ತಮ ಮೂಲಸೌಕರ್ಯ, ಶಾಲಾ ಮೈದಾನ ಪರಿಕಲ್ಪನೆ ಒಳಗೊಂಡಿರುವ ಕೆ.ಪಿ.ಎಸ್. ಶಾಲೆಗೆ ಬೇಡಿಕೆ ಹೆಚ್ಚಿರುವ ಕಾರಣ ಮುಂದಿನ 3 ವರ್ಷದಲ್ಲಿ ಎರಡು ಗ್ರಾಮ ಪಂಚಾಯತಿಗಳಿಗೆ ತಲಾ ಒಂದರಂತೆ 3,000 ಕೆ.ಪಿ.ಎಸ್. ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಯಿಂದ ವಿಮುಖ ಮಾಡಿದವರನ್ನು ಮತ್ತೆ ಸರ್ಕಾರಿ ಶಾಲೆಯತ್ತ ಸೆಳೆಯುವುದರ ಜೊತೆಗೆ ದ್ವಿಭಾಷಾ ಬೋಧನೆಯಲ್ಲಿ ಮಕ್ಕಳು, ಪಾಲಕರಿಗೆ ಅವರ ಆಯ್ಕೆಯ ಭಾಷೆಯಲ್ಲಿಯೆ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.