
ರಾಮನಗರ: ಸರ್ಕಾರಿ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಪಾಠ ಪ್ರವಚನಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಕಣ್ವ ಡಯಾಗ್ನೋಸ್ಟಿಕ್ ಸೆಂಟರ್ ಮಾಲೀಕ ವಿ. ವೆಂಕಟಪ್ಪ ಅವರು ಸ್ವಂತವಾಗಿ ಸುಮಾರು 14 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ವೀಕ್ಷಿಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ಫಂಡ್ ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಸಕಲ ಸೌಲಭ್ಯ ಒಳಗೊಂಡ ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಶಿಕ್ಷಣ ಇಲಾಖೆ ಸುಧಾರಣೆಗೆ ಕೆಪಿಎಸ್ ಶಾಲೆಗಳಿಗೆ ಒತ್ತು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನಮ್ಮ ಸರ್ಕಾರದ ಸಮಸ್ಯೆಯಲ್ಲ, ಈ ಹಿಂದೆ ಆಡಳಿತ ನಡೆಸಿದ ಸರ್ಕಾರಗಳ ತಪ್ಪು ನೀತಿಗಳಿಂದ ಸಮಸ್ಯೆಯಾಗಿದ್ದು, ಅವುಗಳನ್ನು ಬಗೆಹರಿಸಲಾಗುತ್ತಿದೆ. ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.