ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 12,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ತುಮಕೂರಿನಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಇನ್ನೂ 10 ರಿಂದ 12 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು. ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಪ್ರಸ್ತಾವನೆ ಆರ್ಥಿಕ ಇಲಾಖೆಯ ಮುಂದಿದ್ದು, ಅನುಮತಿ ದೊರೆತ ಕೂಡಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಶಾಲೆಗಳಲ್ಲಿ ಶಿಕ್ಷಕರ ಸಮಸ್ಯೆ ಪರಿಹಾರದ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭದಲ್ಲಿ 50,000 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016 ರಿಂದ 20ರವರೆಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಆದೇಶ ನೀಡಲಾಗಿದ್ದು, ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 2,000 ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲಾಗಿದೆ. ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲಾಗುವುದು. ನಾಲ್ಕು ವರ್ಷದಲ್ಲಿ ಹಂತ ಹಂತವಾಗಿ ಮೂರು ಸಾವಿರ ಕೆಪಿಎಸ್ ಶಾಲೆ ತೆರೆಯಲ ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.