ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಅನುಮತಿ ಕೋರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯತೀಂದ್ರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 7500 ಶಿಕ್ಷಕರು, ಪ್ರೌಢಶಾಲೆಯ 2500 ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಆರ್ಥಿಕ ಇಲಾಖೆ ಅನುಮತಿ ನೀಡಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 8954 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.