
ಬೆಂಗಳೂರು: ಶಿಕ್ಷಕರ ವೇತನವನ್ನು ದ್ವಿಗುಣಗೊಳಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆ ಒಳಗೊಂಡ ಪಟ್ಟಿಯನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 7ನೇ ವೇತನ ಆಯೋಗಕ್ಕೆ ಬೇಡಿಕೆ ಮಂಡಿಸಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ನಿಯೋಗ ವತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರಸ್ತುತ ಪಡೆಯುತ್ತಿರುವ ವೇತನ ಶ್ರೇಣಿ 25,800 – 51,400 ರೂ.ಗಳನ್ನು ದ್ವಿಗುಣಗೊಳಿಸಿ 51, 600-1,02,800 ರೂ.ಗಳ ಆರಂಭಿಕ ಪ್ರತ್ಯೇಕ ವೇತನ ಶ್ರೇಣಿ ನಿಗದಿ ಮಾಡಬೇಕು. 10 ವರ್ಷ ಸೇವೆ ಸಲ್ಲಿಸಿದ ಶಿಕ್ಷಕರಿಗೆ ನೀಡುವ ಕಾಲಮಿತಿ ಬಡ್ತಿ ವೇತನ ಶ್ರೇಣಿಯನ್ನು ದ್ವಿಗುಣಗೊಳಿಸಿ ಪ್ರತ್ಯೇಕ ವೇತನ ಶ್ರೇಣಿ ನಿಗದಿಪಡಿಸಬೇಕು ಎಂದು ಮನವಿ ಮಾಡಲಾಗಿದೆ.
15 ವರ್ಷ ಸೇವೆ ಸಲ್ಲಿಸಿದವರಿಗೆ ನೀಡುವ ಸ್ವಯಂ ಚಾಲಿತ ಬಡ್ತಿ ವೇತನ ಶ್ರೇಣಿಯನ್ನು ಎರಡು ಪಟ್ಟು ಹೆಚ್ಚಳ ಮಾಡಿ ಪ್ರತ್ಯೇಕ ವೇತನ ಶ್ರೇಣಿ ನಿಗದಿ ಮಾಡಬೇಕು. ಪದವೀಧರ ಶಿಕ್ಷಕರು ಹಾಲಿ ಪಡೆಯುತ್ತಿರುವ ವೇತನಗೊಳಿಸಿ ಪ್ರತ್ಯೇಕ ವೇತನ ಶ್ರೇಣಿ ನಿಗದಿ ಮಾಡಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.
ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ನೇಮಕ ಮಾಡಬೇಕು. ವಾರದಲ್ಲಿ ಐದು ದಿನ ಮಾತ್ರ ಶಾಲೆಗಳು ಕಾರ್ಯನಿರ್ವಹಿಸಬೇಕು. ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯುಕೆಜಿ ಪ್ರಾರಂಭಿಸಬೇಕು ಎಂದು 25 ಪ್ರಮುಖ ಬೇಡಿಕೆಗಳ ಈಡೇರಿಕೆಗೆ 135 ಪುಟಗಳ ಪ್ರತಿಕ್ರಿಯೆ ಸಲ್ಲಿಸಲಾಗಿದೆ.