ಬೆಂಗಳೂರು: ದೈಹಿಕ ಶಿಕ್ಷಕರ ಬಹುದಿನಗಳ ಬೇಡಿಕೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಸ್ತು ಎಂದಿದ್ದು, ದೈಹಿಕ ಶಿಕ್ಷಣ ಪರಿವೀಕ್ಷಕ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರನ್ನು ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲಾಗಿದೆ. 148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ ಸಿಗಲಿದೆ. ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಗ್ರೇಡ್ -1 ಹುದ್ದೆಯಿಂದ ಗ್ರೂಪ್ -ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.
ಜೂನ್ 21 ರಂದು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತದೆ. ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಆಯ್ಕೆಯಾದ ಶಿಕ್ಷಕರು ತಮ್ಮ ಇಚ್ಛಾನುಸಾರ ಸ್ಥಳ ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಲಾಗಿದೆ.