ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಆರೋಪದ ಮೇಲೆ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡ ಮುಖ್ಯಶಿಕ್ಷಕಿ ಸ್ನೇಹಲತಾ ಅವರ ವಿರುದ್ಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್ಐಆರ್ ದಾಖಲಿಸಲಾಗಿದೆ.
ಮಕ್ಕಳ ನ್ಯಾಯ ರಕ್ಷಣೆ ಮತ್ತು ಪೋಷಣೆ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಸಹಾಯಕ ಮಕ್ಕಳ ರಕ್ಷಣಾಧಿಕಾರಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಡಿ. 22 ರಂದು ವಿದ್ಯಾರ್ಥಿನಿ ಶಾಲೆಗೆ ಮೊಬೈಲ್ ತಂದಿದ್ದರಿಂದ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ್ದಲ್ಲದೆ, ಫ್ಯಾನ್ ಕೆಳಗೆ ಕೂರಿಸಿ ಹಿಂಸೆ ನೀಡಲಾಗಿತ್ತು. ಈ ಕುರಿತಾಗಿ ಪೋಷಕರು ಶಿಕ್ಷಣಾಧಿಕಾರಿಗೆ ದೂರು ನೀಡಿದ್ದು, ಪೊಲೀಸರಿಗೆ ದೂರು ನೀಡಿರಲಿಲ್ಲ. ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದು, ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿತ್ತು. ನಂತರದಲ್ಲಿ ಪೊಲೀಸರು ಕೂಡ ಎಪ್ಐಆರ್ ದಾಖಲಿಸಿಕೊಂಡಿದ್ದಾರೆ.