ಬೆಂಗಳೂರು: ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿಧಾನಸಭೆಯಲ್ಲಿ 2019 -20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯಾದ ಶಿಕ್ಷಕರಿಗೆ ಮೊದಲು ಕೌನ್ಸೆಲಿಂಗ್ ನಡೆಸಿ ವರ್ಗಾವಣೆಯಲ್ಲಿ ಆದ್ಯತೆ ಕಲ್ಪಿಸಲು ಕರ್ನಾಟಕ ರಾಜ್ಯ ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆ ತಿದ್ದುಪಡಿ ಮಸೂದೆ ಮಂಡಿಸಿದ್ದಾರೆ.
2016 -17 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಕೆಲವು ಶಿಕ್ಷಕರು ತಮಗೆ ಆದ್ಯತೆ ನೀಡಬೇಕೆಂದು ಕರ್ನಾಟಕ ಆಡಳಿತ ನ್ಯಾಯ ಮಂಡಳಿಗೆ ಮನವಿ ಮಾಡಿದ್ದು, ಅವರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ಕೆಎಟಿ ವರ್ಗಾವಣೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ. ಹೀಗಾಗಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಶಿಕ್ಷಣ ಇಲಾಖೆ ತಾತ್ಕಾಲಿಕವಾಗಿ ಮುಂದೂಡಿದೆ. ಇದರಿಂದಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸುಮಾರು 75,000 ಶಿಕ್ಷಕರಿಗೆ ನಿರಾಸೆಯಾಗಿದೆ.
ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಂಡಿತ್ತು. ಸೆಪ್ಟೆಂಬರ್ 15ರಿಂದ ಕೌನ್ಸೆಲಿಂಗ್ ನಡೆಸಲು ಮುಂದಾಗಿತ್ತು. ಆದರೆ, ತಡೆಯಾಜ್ಞೆ ಕಾರಣ ವರ್ಗಾವಣೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಈಗ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡಿಸಲಾಗಿದೆ. ಇದರ ಅನ್ವಯ 2019 -20 ನೇ ಸಾಲಿನಲ್ಲಿ ವರ್ಗಾವಣೆಯಾದ ಶಿಕ್ಷಕರು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ತಾಲೂಕು ಅಥವಾ ಜಿಲ್ಲೆಯ ಒಳಗೆ ಸ್ಥಳನಿಯುಕ್ತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.