ಬೆಂಗಳೂರು: ದೀರ್ಘಾವಧಿಯಿಂದ ನನೆಗುದಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಂದಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ಧಬಸಪಪ್ ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿಕ್ಷಕರ ವರ್ಗಾವಣೆಯ ಬಗ್ಗೆ ಮನವಿ ಮಾಡಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡ ವರ್ಗಾವಣೆಗಾಗಿ ಕಾಯುತ್ತಿರುವ ಶಿಕ್ಷಕರ ಪರ ತೀರ್ಪಾನ ಕೈಗೊಳ್ಳುವಂತೆ ಸಿಎಂಗೆ ತಿಳಿಸಿದ್ದಾರೆ.
ಈಗಾಗಲೇ ವರ್ಗಾವಣೆ ಕೋರಿ 79 ಸಾವಿರಕ್ಕೂ ಅಧಿಕ ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ಆಯಾ ತಾಲೂಕಿನ ಒಳಗೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮಾಡಬೇಕು. ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದು ಸಿಎಂಗೆ ಮನವಿ ಮಾಡಲಾಗಿದೆ.
ಇದಕ್ಕೆ ಸಿಎಂ ಸಕರಾತ್ಮಕವಾಗಿ ಸ್ಪಂದಿಸಿದ್ದು, ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಹಂತದಲ್ಲಿ ಯಾವುದೇ ವರ್ಗಾವಣೆ ಮಾಡಲು ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿರುವುದರಿಂದ ಆಯೋಗದ ಅನುಮತಿ ಪಡೆದು ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
ಚುನಾವಣೆ ಆಯೋಗ ಒಪ್ಪಿದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ತಕ್ಷಣ ಆರಂಭಿಸಲಾಗುವುದು. ತಾಲೂಕಿನ ಒಳಗೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಿಂದ ಹೆಚ್ಚಿನ ಸಮಸ್ಯೆಯಾಗದು ಎಂಬ ಸಲಹೆ ಮೇರೆಗೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಚುನಾವಣೆ ನೀತಿ ಸಂಹಿತೆ ಜಾರಿಯಾದಲ್ಲಿ ಮೇ ಮಧ್ಯಭಾಗದವರೆಗೆ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಲಿದೆ. ಹೊಸ ಸರ್ಕಾರ ರಚನೆ ಪ್ರಕ್ರಿಯೆ ಕಾರಣ ವರ್ಗಾವಣೆ ಪ್ರಕ್ರಿಯೆಗೆ ತಕ್ಷಣ ಒಪ್ಪಿಗೆ ಸಿಗುವುದು ಕಷ್ಟ ಸಾಧ್ಯ. ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾದಲ್ಲಿ ವರ್ಗಾವಣೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆದು ತಕ್ಷಣ ವರ್ಗಾವಣೆ ನಡೆಸಲು ಕೋರಲಾಗಿದೆ.