ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಬಿಸಲು ಸರ್ಕಾರ ಒಪ್ಪಿಗೆ ನೀಡಿದೆ.
ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಒಂದೆರಡು ದಿನಗಳಲ್ಲಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.
ವರ್ಗಾವಣೆಗೆ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. 2023 -24ನೇ ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲು ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ವತಿಯಿಂದ ಫೆಬ್ರವರಿಯಲ್ಲಿ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು.
75,000ಕ್ಕೂ ಅಧಿಕ ಶಿಕ್ಷಕರು ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದು, ಮೊದಲಿಗೆ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಮತ್ತು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ದಿನಾಂಕ ನಿಗದಿಪಡಿಸಲಾಗಿತ್ತು. ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ಚುನಾವಣಾ ಆಯೋಗದ ನಿರ್ದೇಶನದಂತೆ ತಾತ್ಕಾಲಿಕವಾಗಿ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು.
ಈಗ ಶಿಕ್ಷಕರ ಸಂಘದ ಮನವಿ ಮೇರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ವರ್ಗಾವಣೆ ಪ್ರಕ್ರಿಯೆ ಪುನಾರಾರಂಭಕ್ಕೆ ಸೂಚನೆ ನೀಡಿ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪರಿಷ್ಕೃತ ವೇಳಾಪಟ್ಟಿ ಸಿದ್ದಪಡಿಸಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.