ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್, ಡಿಸಿಎಂ ಜೊತೆ ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ. ಇತ್ತೀಚೆಗೆ ಬಿಜೆಪಿಯ ಹಾಲಿ ಹಾಗೂ ಮಾಜಿ ಶಾಸಕರು ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿರುವ ಬೆನ್ನಲ್ಲೇ ಈಗ ತೇಜಸ್ವಿನಿ ಅನಂತಕುಮಾರ್ ಡಿ.ಕೆ.ಶಿವಕುಮಾರ್ ಭೇಟಿಯಾಗಿರುವುದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.
ತೇಜಸ್ವಿನಿ ಅನಂತಕುಮಾರ್ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. 2019ರಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿತ್ತು. ಇದೀಗ 2024ರಲ್ಲಿಯೂ ತೇಜಸ್ವಿನಿಯವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವುದು ಅನುಮಾನ ಎನ್ನಲಾಗುತ್ತಿದೆ. ಈ ಬೆಳವಣಿಗೆ ನಡುವೆಯೇ ತೇಜಸ್ವಿನಿ ಅನಂತಕುಮಾರ್, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.