ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ನಿಯೋನಾಟಲ್ ಇಂಟೆನ್ಸಿವ್ ಕೇರ್ ಯೂನಿಟ್(ಎನ್‌ಐಸಿಯು) ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ, ಅಲ್ಲಿ ತೀವ್ರವಾಗಿ ಅಸ್ವಸ್ಥ ಶಿಶುಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಪಾಲಕರು ತಮ್ಮ ನವಜಾತ ಶಿಶುಗಳನ್ನು ಸುರಕ್ಷಿತವಾಗಿ ಸಾಗಿಸಲು ಧಾವಿಸಿ ಬಂದಿದ್ದಾರೆ. ಆದರೆ ದಟ್ಟ ಹೊಗೆ ಆವರಣವನ್ನು ಆವರಿಸಿದ್ದ ಕಾರಣ ಕತ್ತಲೆಯಾಗಿ ರಕ್ಷಣಾ ಕಾರ್ಯ ಸಾಧ್ಯವಾಗಿಲ್ಲ. ಘಟನೆಯ ವೇಳೆ ವಾರ್ಡ್‌ನಲ್ಲಿ 47 ಶಿಶುಗಳು ಇದ್ದವು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇದುವರೆಗೆ 31 ಶಿಶುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಇ ಘಟನೆಯು ಪ್ರಸೂತಿ ವಿಭಾಗದಲ್ಲಿ ರಾತ್ರಿ 11:30 ರ ಸುಮಾರಿಗೆ ಸಂಭವಿಸಿದೆ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ. ಜಿಲ್ಲಾಡಳಿತ ಮತ್ತು ವೈದ್ಯಕೀಯ ಕಾಲೇಜು ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ನಿರ್ವಹಿಸುತ್ತಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ
ದುರಂತದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಹಾರೈಸಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಆದೇಶ
ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮತ್ತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಝಾನ್ಸಿಗೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕಳುಹಿಸಲಾಗಿದೆ. ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ 12 ಗಂಟೆಯೊಳಗೆ ವಿವರವಾದ ವರದಿ ಸಲ್ಲಿಸುವಂತೆ ಸಿಎಂ ಯೋಗಿ ಆಯುಕ್ತರು ಮತ್ತು ಡಿಐಜಿಗೆ ಸೂಚನೆ ನೀಡಿದ್ದಾರೆ.