ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಪಠ್ಯ ಪರಿಷ್ಕರಣೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಿಎಂ ಜೂನ್ 5 ರಂದು ಸಂಜೆ ಮಹತ್ವದ ಸಭೆ ಕರೆದಿದ್ದು, ಶಿಕ್ಷಣ ತಜ್ಞರು, ಶಿಕ್ಷಣ ಇಲಾಖೆ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸಬೇಕಾದ ಪಠ್ಯಪುಸ್ತಕಗಳಲ್ಲಿ ಹಿಂದಿನ ಸರ್ಕಾರ ಧರ್ಮದ ಬಗ್ಗೆ ವಿಷ ಬೀಜ ಬಿತ್ತುವಂತಹ ಕೆಲಸ ಮಾಡಿದೆ. ಅವರು ಮಾಡಿದ ತಪ್ಪನ್ನು ಸರಿಪಡಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಮುಂದಿನ ಶೈಕ್ಷಣಿಕ ವರ್ಷಕ್ಕೆ ಪಠ್ಯಪುಸ್ತಕ ಬದಲಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಪಠ್ಯಪುಸ್ತಕ ಮುದ್ರಣಗೊಂಡು ಶಾಲೆಗೆ ಪೂರೈಕೆಯಾಗಿದ್ದು, ಮಕ್ಕಳಲ್ಲಿ ಈ ಸಂದರ್ಭದಲ್ಲಿ ಗೊಂದಲ ಉಂಟು ಮಾಡುವುದು ಸರಿಯಲ್ಲ. ಕೆಲವೊಂದು ಪಠ್ಯಗಳನ್ನು ಈ ವರ್ಷದ ಮಟ್ಟಿಗೆ ಕೈ ಬಿಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಗೊಂದಲವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಲು ತೀರ್ಮಾನಿಸಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಯಾವ ರೀತಿ ಯಾವ ಹಂತದಲ್ಲಿ ರದ್ದುಗೊಳಿಸಬೇಕೆಂಬುದರ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.