ಬೆಂಗಳೂರು: ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಸೂಚನೆ ನೀಡಿದೆ.
ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಖರೀದಿಸಿದ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡುವಾಗ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಅನುದಾನ ರಹಿತ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಕುರಿತಾಗಿ ಸೂಚಿಸಲಾಗಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುವ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕ ಸಂಘದಿಂದ ಸಿದ್ಧಪಡಿಸಲಾದ ಪಠ್ಯಪುಸ್ತಕಗಳನ್ನು ಸರ್ಕಾರ ಸರಬರಾಜು ಮಾಡುತ್ತದೆ. ಈ ಬಾರಿಯೂ ಖಾಸಗಿ ಶಾಲೆಗಳು ಸಲ್ಲಿಸಿದ ಬೇಡಿಕೆ ಆಧಾರದಲ್ಲಿ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಪ್ರತಿ ಪಠ್ಯಪುಸ್ತಕಕ್ಕೆ ದರ ನಿಗದಿಪಡಿಸಿ ನಮೂದಿಸಲಾಗಿದ್ದು, ಇದೇ ದರ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಪುಸ್ತಕ ನೀಡಬೇಕೆಂದು ಸೂಚನೆ ನೀಡಲಾಗಿದೆ. ಕೆಲವು ಶಾಲೆಗಳು ಹೆಚ್ಚು ಹಣ ವಸೂಲಿ ಮಾಡುತ್ತಿರುವ ಕುರಿತು ಪೋಷಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ.